ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿದ್ದ ಕೆಲ ನಾಯಕರು ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಸ್ವತ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನೀಡಿರುವ ಹೇಳಿಕೆ ಮತ್ತಷ್ಟು ಕುತೂಹಲ ಮೂಡಿಸಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕರು ಮರಳಿ ಕಾಂಗ್ರೆಸ್ ಗೆ ಬರುವ ವಿಚಾರವಾಗಿ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದ್ದಾರೆ.
ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ವಿಚಾರವಾಗಿ ಮಾತನಾಡಿದ ಡಿಸಿಎಂ, ಕಾಂಗ್ರೆಸ್ ಸೇರಲು ಸಿದ್ಧವಿದ್ದರೆ ಸೇರಿಕೊಳ್ಳಿ ಎಂದು ಹೇಳಿದ್ದೇನೆ. ಕೆಲ ಕಾರ್ಯಕರ್ತರು ಬಹಳ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ವೋಟ್ ಶೇರ್ ಜಾಸ್ತಿ ಮಾಡಿಕೊಳ್ಳಲು ಕಾರ್ಯಕರ್ತರಿಗೆ ಹೇಳಿದ್ದೇವೆ. ಸೋಮಶೇಖರ್ ಪಕ್ಷ ಸೇರ್ಪಡೆ ಬಗ್ಗೆ ವೈಯಕ್ತಿಕವಾಗಿ ಹೇಳಿರಬಹುದು. ಆ ವಿಚಾರ ನನ್ನ ವರೆಗೆ ಬಂದಿಲ್ಲ. ಯಾವಾಗ ಏನು ಬೇಕಾದರು ಆಗಬಹುದು. ಆದ್ರೆ ಕಾಂಗ್ರೆಸ್ ಗೆ ಯಾರು ಬರುತ್ತಾರೆ? ಏನು? ಎಂಬುದನ್ನು ನಾನು ಹೇಳಲ್ಲ ಎಂದಿದ್ದಾರೆ.
ಸಚಿವ ಚಲುವರಾಯಸ್ವಾಮಿ, 10-15 ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಇಮ್ಮಡಿಗೊಳಿಸಿದೆ.