ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಪ್ಪು ಯಾರೇ ಮಾಡಿದರೂ ಕಾನೂನು ಪ್ರಕಾರ ಅವರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಪೊಲೀಸರು, ಅಧಿಕಾರಿಗಳು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ ಎಂದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ಸಮಿತಿ ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಸಮಾಜದಲ್ಲಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇವೆ. ಆದರೆ ಬಿಜೆಪಿಯವರು ಶಾಂತಿ ಕದಡಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರು ಸತ್ಯ ಶೋಧನೆ ಮಾಡುವುದು ಏನಿದೆ? ಎಂದು ಪ್ರಶ್ನಿದರು.
ಕಬ್ಬಿಣವನ್ನು ಎರಡು ರೀತಿಯಲ್ಲಿ ಉಪಯೋಗಿಸಬಹುದು ಒಂದು ಸೂಚಿ ತಯಾರಿಸಿ ಜೋಡಿಸುವ ಕೆಲಸ ಇನ್ನೊಂದು ಕತ್ತಿ, ಕತ್ತರಿ ತಯಾರಿಸಿ ಒಡೆಯುವ ಕೆಲಸ. ನಾವು ಸೂಜಿ ತರಹ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರು ಕತ್ತಿ ತರ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದು ಹೇಳಿದರು.