ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ.ರವಿ ಅವರ ಸಹಕಾರ ಸಿ.ಪಿ. ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆಯನ್ನು ಮಾಧ್ಯಮದವರು ಮಾಡಿಕೊಳ್ಳಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ.ಟಿ.ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರ ಹಾಗೂ ಬಿಜೆಪಿಯ ಬಗ್ಗೆ ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಬಿಜೆಪಿಯ ಕೆಲ ನಾಯಕರಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ. ಸಿ.ಟಿ ರವಿಯವರ ಸಹಕಾರ ಯೋಗೇಶ್ವರ್ ಪರವಾಗಿದೆ ಎಂದರು.
ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಅವರ ಪಕ್ಷದ ತೀರ್ಮಾನ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಎನ್ ಡಿಎ ಅಭ್ಯರ್ಥಿ ಯಾರು ಎಂಬುದನ್ನು ಕಾದು ನೋಡೋಣ ಎಂದರು.
ಇನ್ನು ಚನ್ನಪಟ್ಟಣದಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಕಾರಣ ನಾನು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ತಕ್ಷಣ ಇನ್ನೊಂದು ಚುನಾವಣೆಗೆ ನಿಂತರೆ, ಜನರಿಗೆ ಒಳ್ಳೆಯ ಸಂದೇಶ ನೀಡಿದಂತೆ ಆಗುವುದಿಲ್ಲ. ಹೀಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೈಕಮಾಂಡ್ ಗೆ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಅನೇಕ ಕಾರ್ಯಕರ್ತರು ನಾನೇ ನಿಲ್ಲಬೇಕು ಎಂದು ಹೇಳಿದರು. ಆದರೆ ನಾನು ಒಪ್ಪಿಲ್ಲ. ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಅಭ್ಯರ್ಥಿಗಳ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿದ್ದೇವೆ ಎಂದರು.
ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳ ಅಭ್ಯರ್ತಿಗಳ ಆಯ್ಕೆಯೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ್ದಾರೆ. ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.