ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಮನೆ, ತೋಟಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಮಳೆಯಾಗುತ್ತಿದ್ದು, ಕುಮಾರಧಾರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಬಳಿ ಕುಮಾರಾಧಾರ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಸ್ನಾನಘಟ್ಟಕ್ಕೆ ಇಳಿಯದಂತೆ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಕಟ್ಟೆಚ್ಚರಕೆ ಸೂಚಿಸಿದೆ.
ಇನ್ನು ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಬಂಟ್ವಾಳದ ಹೊಸ್ಮಾರುವಿನಲ್ಲಿ ಮನೆ ಕಾಂಪೌಂಡ್ ಕುಸಿದು ಬಿದ್ದು ಅವಾಂತರ ಸೃಷ್ಟಿಯಾಗಿದೆ. ಮುಂಜಾಗೃತಾ ಕ್ರಮವಾಗಿ ಅಶೋಕ್ ಹಾಗೂ ಸುರೇಶ್ ಪೂಜಾರಿ ಕುಟುಂಬದವರನ್ನು ಸ್ಥಳಾಂತರ ಮಾಡಲಾಗಿದೆ.