ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ಅಸಮಾಧಾನಗೊಂಡ ಮೇಲ್ಜಾತಿಯ ವ್ಯಕ್ತಿಗಳ ಗುಂಪೊಂದು ಅವರನ್ನು ಥಳಿಸಿರೋ ಆಘಾತಕಾರಿ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಪಾಲನ್‌ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಹಲ್ಲೆಗೊಳಗಾದ ಸಂತ್ರಸ್ತ ಮತ್ತು ಆತನ ತಾಯಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಜಿಗರ್ ಶೆಖಾಲಿಯಾ ನೀಡಿದ ದೂರಿನ ಆಧಾರದ ಮೇಲೆ ಏಳು ಜನರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ತಾನು ಉತ್ತಮ ಬಟ್ಟೆ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕಾಗಿ ಅಸಮಾಧಾನಗೊಂಡಿದ್ದ ಅವರು ತನಗೆ ಥಳಿಸಿದ್ದಾರೆ. ಹಲ್ಲೆ ತಡೆಯಲು ಮುಂದಾದ ನನ್ನ ತಾಯಿಗೂ ಹೊಡೆದಿದ್ದಾರೆಂದು ದೂರು ನೀಡಿದ್ದಾರೆ.
ಏಳು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ ಗಧ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಅವರ ವಿರುದ್ಧ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.