ಬೆಳಗಾವಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ವಿಚಾರವಾಗಿ ಈಗಾಗಲೇ 7 ಜನ ಜೈಲು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಇದು ಅಧಿಕಾರಿಗಳ ಮಟ್ಟದಲ್ಲಿಯೇ ನಡೆದಿರುವ ಘಟನೆ. ಹಾಗಾಗಿ ಯಾವೆಲ್ಲ ಅಧಿಕರಿಗಳು ಇದ್ದಾರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಇನ್ನೂ ಕೆಲವರು ಸಸ್ಪೆಂಡ್ ಆಗಲಿದ್ದಾರೆ ಎಂದರು.
ಗೃಹ ಸಚಿವರಿಗೆ ಖುದ್ದು ಜೈಲಿಗೆ ಹೋಗಿ ಪರಿಶೀಲಿಸಲು ಸೂಚಿಸಿದ್ದೇನೆ. ಜೈಲಿನಲ್ಲಿ ಆರೋಪಿಗಳಿಗೆ ಸೌಲಭ್ಯ ಒದಗಿಸುತ್ತಿರುವವರು ಯಾರು ಎಂಬುದನ್ನು ತಪಾಸಣೆ ನಡೆಸಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ಹೇಳಿದ್ದೇನೆ ಎಂದರು.
ಇದೇ ವೇಳೆ ದರ್ಶನ್ ಹಾಗು ಇತರರನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ? ಬೇಡವೇ ಎಂಬ ನಿಟ್ಟಿನಲ್ಲಿಯೂ ಚಿಂತನೆ ನಡೆದಿದೆ ಎಂದು ಹೇಳಿದರು.
ಈ ಮಧ್ಯೆ ನಟ ದರ್ಶನ್ ನನ್ನು ಬೆಳಗಾವಿ ಹಿಂದಾಗಾ ಜೈಲಿಗೆ ಶಿಫ್ಟ್ ಮಾಡುವ ನಿಟ್ಟಿನಲ್ಲಿ ಜೈಲಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡುವುದರಿಂದ ಎದುರಾಗಬಹುದಾದ ಸದ್ಯಸಾಧ್ಯತೆಗಳ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಸಂಜೆ ವೇಳೆಗೆ ಸ್ಪಷ್ಟ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.