ಚಿಕ್ಕಮಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಸೈಯದ್ ಮೊಹಿದ್ದೀನ್ ಶಾಖಾದ್ರಿ ಕೇಸ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸುವ ವಿಚಾರವಾಗಿ ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಕಾನೂನು, ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ.ಪಾಟೀಲ್, ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಮಿತಿ ಸದಸ್ಯರಾಗಿದ್ದಾರೆ.
ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠಕ್ಕೆ ಅರ್ಚಕರನ್ನು ನೇಮಕ ಮಾಡುವ ವಿಚಾರವಾಗಿ ಈ ಹಿಂದೆ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚಿಸಿತ್ತು, ಓರ್ವ ಮುಸ್ಲಿಂ ಸದಸ್ಯ ಸೇರಿ ಆಡಳಿತ ಮಂಡಳಿಯಲ್ಲಿ 8 ಜನರಿದ್ದು, ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ನೀಡಲಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಸಂಪುಟ ಉಪಸಮಿತಿ ರಚಿಸಲಾಗಿದೆ.