
ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಮಲೆಬೆನ್ನೂರು ಗ್ರಾಮದ ಮೊಹಮ್ಮದ್ ಇರ್ಫಾನ್(24) ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಅಭಿಷೇಕ್ ಎಂಬ ಯುವಕ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಗಾಯಾಳು ಇರ್ಫಾನನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಸ್ಪಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಾರ್ವಜನಿಕರಲ್ಲಿ ಎಸ್.ಪಿ. ರಿಷ್ಯಂತ್ ಮನವಿ ಮಾಡಿದ್ದಾರೆ. ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹರಿಹರ, ಮಲೆಬೆನ್ನೂರಿನಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.