
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವಕ್ಕೆ ದಾವಣಗೆರೆ ಸಜ್ಜಾಗಿದೆ. ಕುಂದವಾಡ ಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮದ ವೇದಿಕೆ ಸಿದ್ಧಪಡಿಸಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಮೃತ ಮಹೋತ್ಸವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಚುನಾವಣೆ ಪ್ರಚಾರ ಕೂಡ ಆರಂಭವಾಗಲಿದೆ. ಮುಂದಿನ ಮುಖ್ಯಮಂತ್ರಿ ವಿಚಾರವೂ ಮುನ್ನೆಲೆಗೆ ಬಂದಿದೆ.
ಕಾರ್ಯಕ್ರಮಕ್ಕೆ ದಾವಣಗೆರೆ ಸಜ್ಜಾಗಿದ್ದು, ಬೃಹತ್ ಕಟೌಟ್ ಗಳು ಬ್ಯಾನರ್ ಗಳನ್ನು ಅಳವಡಿಸಲಾಗಿದೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಬೆಳಗಿನ ತಿಂಡಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಪಲಾವ್, ಮೊಸರನ್ನ, ಸಿಹಿ ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. 200 ಕೌಂಟರ್ ಗಳಲ್ಲಿ ಊಟ ಬಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ವೇದಿಕೆ ಪಕ್ಕದಲ್ಲಿ ಗಣ್ಯರ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಖಾಲಿ ಜಮೀನುಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಸಂಗೀತ ನಿರ್ದೇಶಕ ಹಂಸಲೇಖ ತಂಡದಿಂದ ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಶುರುವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಆರಂಭವಾಗಲಿದೆ.