ಮೈಸೂರು: ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಮೈಸೂರು ಜಿಲ್ಲೆ ಸರಗೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆವರಣದಲ್ಲಿ ಕೋವಿಡ್ ವಾರ್ಡ್ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ನರ್ಸುಗಳು, ಡಿ ಗ್ರೂಪ್, ಪ್ಯಾರಾ ಮೆಡಿಕಲ್ ಸೇರಿದಂತೆ 7500 ವೈದ್ಯ ಸಿಬ್ಬಂದಿಯನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮೂರನೇ ಅಲೆ ಸೇರಿ ಆರೋಗ್ಯ ಬಿಕ್ಕಟ್ಟುಗಳನ್ನು ಎದುರಿಸಲು ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದು ಮೇಲ್ದರ್ಜೆಗೆ ಏರಿಸಲಾಗ್ತಿದೆ. ಗ್ರಾಮೀಣ ಸಮುದಾಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳ ವೈದ್ಯಕೀಯ ಸೌಲಭ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ಉತ್ತಮಪಡಿಸಲಾಗುತ್ತಿದೆ. ಹೊಸ ತಂತ್ರಜ್ಞಾನ ಬಳಕೆ, ವೈದ್ಯಕೀಯ ಉಪಕರಣಗಳ ಅಳವಡಿಕೆ, ಕಟ್ಟಡಗಳ ನ್ಯೂನ್ಯತೆ ನಿವಾರಿಸಲು ಕ್ರಮಕೈಗೊಳ್ಳಲಾಗಿದೆ. ಪ್ರತಿ ಹಳ್ಳಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.