ಬೆಂಗಳೂರು: 1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆ ಮಾಡಲಾಗಿದೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಕೋವಿಡ್ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್‌ಎಂಎಸ್)ಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಅದಕ್ಕೆ ನೆರವಾಗುವಂತೆ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್ ಪಿಸಿಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ ಕೊಡಲಾಗಿತ್ತು. ಕ್ಲಾಸ್ ರೂಮ್ ಗಳನ್ನೇ ಸ್ಟುಡಿಯೋಗಳ್ನಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್ ಕ್ಲಾಸ್ ರೂಮ್ ಗಳಾಗಿವೆ. ಮನೆಯಿಂದಲೇ ವ್ಯಾಸಂಗವನ್ನು ಮುಂದುವರಿಸಬಹುದು ಎಂದು ಮಾಹಿತಿ ನೀಡಿದ್ದಾರೆ.
ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯಲ್ಲಿ ಸರಿಯಾಗಿ ಕಂಟೆಂಟ್ ಅನ್ನು ಅಪ್‌ಲೋಡ್ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿದ ಡಿಸಿಎಂ ಅವರು: ಈ ಕೂಡಲೇ ಅದನ್ನು ಸರಿ ಮಾಡುತ್ತೇವೆ. ಈ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ. ಇಡೀ ದೇಶದಲ್ಲೇ ಮೊತ್ತ ಮೊದಲಿಗೆ ಇಂಥ ಕಲಿಕಾ ವ್ಯವಸ್ಥೆಯನ್ನು ಜಾರಿಗೆ ತಂದ ರಾಜ್ಯ ಕರ್ನಾಟಕ. ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.