ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್ 10ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶಾಸಕಾಂಗ ಸಭೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದ ಕುರಿತಾಗಿ ಚರ್ಚೆ ನಡೆಸಲಾಗುವುದು. ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷವಾದ ಹಿನ್ನೆಲೆಯಲ್ಲಿ ಡಿಸೆಂಬರ್ 26, 27ರಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೊದಲ ದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಎರಡನೇ ದಿನ ಸಾರ್ವಜನಿಕ ಸಭೆ ನಡೆಸಲಾಗುವುದು. ಸೋಮವಾರ ಕಾರ್ಯಕ್ರಮ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.