ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುವಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಸಿಎಂ, ಸಂಪುಟ ಸಭೆಯಲ್ಲಿ ಎಲ್ಲರೂ ಸೇರಿ ನಿರ್ಣಯ ಮಾಡಿದ್ದೇವೆ. ನೋಟಿಸ್ ನೀಡಿದ್ದರ ಬಗ್ಗೆ ಚರ್ಚೆ ನಡೆಸಿದ್ದು, ಅದನ್ನು ಹಿಂಪಡೆಯುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ಲೋಪ ಆಗಿಲ್ಲ. ಬಿಜೆಪಿ ಅವಧಿಯಲ್ಲಿಯೇ ಹಂಚಿಕೆ ಮಾಡಲಾಗಿದೆ. ಪ್ರಜಾಪ್ರಭುತ್ವಕ್ಕೆ ಮಾರಕ ಪರಿಸ್ಥಿತಿ ಬಂದಿದೆ. ಟಿ.ಜೆ. ಅಬ್ರಹಾಂ ಅವರ ದೂರನ್ನು ರಾಜ್ಯಪಾಲರು ತಿರಸ್ಕರಿಸಬೇಕು. ಸಿಎಂ ಗೆ ನೀಡಿದ್ದ ನೋಟಿಸ್ ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ.
136 ಸೀಟ್ ನೀಡಿ ಕರ್ನಾಟಕದ ಜನ ಆಶೀರ್ವದಿಸಿದ್ದಾರೆ. 136 ಶಾಸಕರ ಬೆಂಬಲದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಇಂತಹ ಸರ್ಕಾರವನ್ನು ತೆಗೆಯಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ರಾಜ್ಯಪಾಲರು ಮುಡಾ ಹಗರಣದ ಬಗ್ಗೆ ಪತ್ರಿಕೆಯಲ್ಲಿ ಬಂದಿದೆ ಎಂದು ಮಾಹಿತಿ ಕೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆಗೆ ವಹಿಸಿದೆ ಎಂದು ತಿಳಿಸಿದ್ದಾರೆ.