ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತರಿಗೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠದಿಂದ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಯನ್ನು 4 ವಾರ ಮುಂದೂಡಲಾಗಿದೆ.
ಇದು ರಾಜ್ಯ ಸಿಬಿಐ ನಡುವಿನ ವಿಷಯವಾಗಿರುವುದರಿಂದ ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಹೇಗೆ ಅವಕಾಶವಿದೆ ಎಂದು ನ್ಯಾಯಪೀಠ ಆರಂಭದಲ್ಲಿ ಪ್ರಶ್ನಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಇದು ರಾಜ್ಯ ಮತ್ತು ಸಿಬಿಐ ನಡುವಿನ ಪ್ರಕರಣವಾಗಿದ್ದು, ಇದರಲ್ಲಿ ಪ್ರತಿವಾದಿಯಾಗಿರುವುದು ಸಿಬಿಐ ಮತ್ತು ಹೈಕೋರ್ಟ್ ಆದೇಶ ಸರಿಯಾಗಿದೆ ಎಂದು ಹೇಳಿದ್ದಾರೆ.
ಯತ್ನಾಳ್ ಪರ ಹಿರಿಯ ವಕೀಲ ಸಿದ್ದಾರ್ಥ್ ದವೆ ವಾದ ಮಂಡಿಸಿ, ನೀವು ಹೇಳಿರುವುದು ಸರಿ ಇರಬಹುದು, ಸಿಬಿಐ ಮಾತ್ರ ಪ್ರತಿ ವಾದಿ ಎಂದು ಹೈಕೋರ್ಟ್ ಹೇಳಬಹುದಿತ್ತು ಎಂದು ವಾದ ಮಂಡಿಸಿದ್ದಾರೆ.
ಯತ್ನಾಳ್ ಮತ್ತು ಸಿಬಿಐಸ್ ಸಲ್ಲಿಸಿದ ಅರ್ಜಿಗಳನ್ನು ಇತ್ತೀಚೆಗೆ ಹೈಕೋರ್ಟ್ ವಜಾಗೊಳಿಸಿತ್ತು. ಆದಾಯ ಮೇಲೆ ಆಸ್ತಿಗಳಿಗೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು, ಈಗಿನ ಕಾಂಗ್ರೆಸ್ ಸರ್ಕಾರ ಅನುಮತಿಯನ್ನು ಹಿಂಪಡೆದುಕೊಂಡು ಲೋಕಾಯುಕ್ತ ತನಿಖೆಗೆ ವಹಿಸಿದೆ.