ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು , ಮೇಲ್ಮನವಿ ವಾಪಸ್ ಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಧಿಕ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮೇಲ್ಮನವಿ ವಾಪಸ್ ಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಬಿಐ ತನಿಖೆಗೆ ಆದೇಶಿಸಿದ್ದ ಹಿಂದಿನ ಸರ್ಕಾರದ ಆದೇಶ ರದ್ದು ಕೋರಿ ಡಿಕೆ ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿತ್ತು.
ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಎರಡು ವಾರಗಳಲ್ಲಿ ಮೇಲ್ಮನವಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯ ಸರ್ಕಾರದ ಪರ ಎಜೆ ಶಶಿಕಿರಣ್ ಶೆಟ್ಟಿ ಅವರು, ರಾಜ್ಯ ಸಂಪುಟದ ನಿರ್ಧಾರವನ್ನು ಲಿಖಿತ ಪತ್ರದಲ್ಲಿ ಇಟ್ಟಿದ್ದರು.
ತೀರ್ಪು ಪ್ರಕಟಿಸಿದಂತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸಿಬಿಐ, ಯತ್ನಾಳ್ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ. ಈವರೆಗೂ ಸರ್ಕಾರದ ಕ್ರಮ ಯಾರು ಪ್ರಶ್ನಿಸಿ ಅರ್ಜಿ ಸಲ್ಲಿಸಿಲ್ಲ. ಕಾಜಿ ಲೆಂಡಪ್ ದೋರ್ಜ್ ಪ್ರಕರಣದಲ್ಲಿ ಸರ್ಕಾರದ ಕ್ರಮ ಪ್ರಶ್ನಿಸಲಾಗಿತ್ತು ಎಂಬುದಾಗಿ ಹೇಳುವ ಮೂಲಕ, ಡಿಕೆ ಶಿವಕುಮಾರ್ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿ ವಾಪಾಸ್ ಗೆ ಅನುಮತಿ ನೀಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ ಹಿನ್ನೆಲೆ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಸಹಮತ ವ್ಯಕ್ತಪಡಿಸಿದೆ.ಇದೊಂದು ರಾಜಕೀಯ ಪ್ರಕರಣ ಎಂದು ಅಭಿಪ್ರಾಯಪಟ್ಟು ಅನುಮತಿ ಹಿಂಪಡೆಯಲು ತೀರ್ಮಾನ ಕೈಗೊಳ್ಳಲಾಗಿತ್ತು.
ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ ಕುರಿತಾಗಿ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2018ರಲ್ಲಿ ಡಿ.ಕೆ. ಶಿವಕುಮಾರ್ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿ, 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಇದರ ವಿರುದ್ಧ ಡಿ.ಕೆ. ಶಿವಕುಮಾರ್ ಕೋರ್ಟ್ ಮೊರೆ ಹೋಗಿದ್ದರು. ಬಳಿಕ ಗೃಹ ಇಲಾಖೆಯಿಂದ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿ ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆಯಲು ಸರ್ಕಾರ ತೀರ್ಮಾನಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು.