ಬೆಂಗಳೂರು: ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆಯುವುದನ್ನು ನಿಷೇಧಿಸಲಾಗಿದೆ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸರಕು ವಾಹನಗಳಲ್ಲಿ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತಾಗಿ ಗೃಹ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಆರ್. ಪ್ರಸನ್ನ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಿಗದಿತ ಪ್ರಯಾಣಿಕರಿಗಿಂತ ಹೆಚ್ಚಿನ ಜನರನ್ನು ಮ್ಯಾಕ್ಸಿಕ್ಯಾಬ್ ಇತರೆ ವಾಹನಗಳಲ್ಲಿ ಕರೆದೊಯ್ಯುತ್ತಿರುವುದು ಗಮನಕ್ಕೆ ಬಂದಿದೆ. ನಿಯಮ ಉಲ್ಲಂಘಿಸಿದ ವಾಹನಗಳಿಂದ ದಂಡ ವಸೂಲಿ ಮಾಡಲಾಗುತ್ತಿದೆ. ಹೆಚ್ಚುವರಿ ಆಸನ ಸಾಮರ್ಥ್ಯ ಅಳವಡಿಸಿಕೊಂಡಿದ್ದರೆ ನೋಂದಣಿ ಪ್ರಮಾಣ ಪತ್ರದಲ್ಲಿ ನಮೂದಿಸಬೇಕು. ನೋಂದಣಿ ಪ್ರಾಧಿಕಾರಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.