ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕವೂ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನೀರಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶಾಸಕರು ಮತ್ತು ಜನಪ್ರತಿನಿಧಿಗಳ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಪತ್ರ ಬರೆದು ಬೆಂಗಳೂರು ಜಲಮಂಡಳಿಯ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಸದ್ಯ ಪ್ರತಿ ತಿಂಗಳು ಜಲಮಂಡಳಿಗೆ ಸುಮಾರು 82 ಕೋಟಿ ರೂ. ನಷ್ಟವಾಗುತ್ತಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ನೇತೃತ್ವದ ಸಭೆಯ ಮುಂದೆ ವಿಷಯ ಮಂಡಿಸಲಾಗುವುದು. ಸಭೆಯ ನಿರ್ಧಾರದಂತೆ ನೀರಿನ ದರ ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.