ದಾವಣಗೆರೆ : ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕಾರ್ಯವೂ ಸರಿಯಾಗಿ ನಡೆದಿಲ್ಲ. ಹೀಗಾಗಿ ರಾಜ್ಯವನ್ನು ಬರ ಪೀಡಿತವೆಂದ ಘೋಷಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದ್ದು, ಶೇ. 10 ರಷ್ಟು ಬಿತ್ತನೆ ಕಾರ್ಯ ಆಗಿಲ್ಲ. ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕರ್ನಾಟಕವನ್ನು ಬರ ಪೀಡಿತ ರಾಜ್ಯವೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಮಳೆ ಇಲ್ಲದೇ ಜನರು ಕಂಗಾಲಾಗಿದ್ದಾರೆ. ಸರ್ಕಾರ ಮಾತ್ರ ಬರ ಪೀಡಿತ ಪ್ರದೇಶ, ಬರ ಪೀಡಿತ ರಾಜ್ಯವೆಂಬ ಘೋಷಣೆಗೆ ಮೀನ-ಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.