alex Certify ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ: ಪ್ರಧಾನಿ ಮೋದಿಗೆ ಸಿಎಂ ನೇತೃತ್ವದ ನಿಯೋಗ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ: ಪ್ರಧಾನಿ ಮೋದಿಗೆ ಸಿಎಂ ನೇತೃತ್ವದ ನಿಯೋಗ ಮನವಿ

ನವದೆಹಲಿ: ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ನಿಯೋಗ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಮನವಿ ಮಾಡಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9,000 ಕೋಟಿ ರೂ.ಗಳ ಡಿ.ಪಿ.ಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದ್ದು, ಸದರಿ ಯೋಜನೆಯ ಬಗ್ಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸಬೇಕೆಂದು ಕೋರಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಬಜೆಟ್ 2023-2024 ರಲ್ಲಿ ಘೋಷಿಸಿದಂತೆ 5,300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಲಾಯಿತು. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3,000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ  ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವುದು.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ  44.65 ಕಿಮೀ ಗಳನ್ನು ರೂ.15,611 ಕೋಟಿ ವೆಚ್ಚದ ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವುದು.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವುದು.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6,000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವುದು.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು  ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸುವುದು.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವುದು.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ  3,000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು, ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡುವುದು.

15ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ ರೂ.5,495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ. ಪರಮೇಶ್ವರ್, ಡಾ.ಹೆಚ್.ಸಿ. ಮಹಾದೇವಪ್ಪ ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...