ನವದೆಹಲಿ: 2019 ರಲ್ಲಿ ಕೋರ್ಟ್ ಆದೇಶ ನೀಡಿದ್ದರೂ ಶಿಕ್ಷಣ ಹಕ್ಕು ಕಾಯ್ದೆಯನ್ನು(ಆರ್ಟಿಇ) ಕಾಯ್ದೆಯನ್ನು 8 ನೇ ತರಗತಿಯಿಂದ 12 ನೇ ತರಗತಿಯವರೆಗೆ ಏಕೆ ವಿಸ್ತರಿಸಿಲ್ಲ ಎಂದು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.
ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದ್ದು, ಆರ್.ಟಿ.ಇ. ವಿಳಂಬಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ಶಿಕ್ಷಣ ಹಕ್ಕು ಕಾಯ್ದೆಯನ್ನು ಆರ್ಥಿಕವಾಗಿ ಹಿಂದುಳಿದ 14 ವರ್ಷ ಮೇಲ್ಪಟ್ಟ ಮಕ್ಕಳಿಗೂ ವಿಸ್ತರಿಸುವ ಕುರಿತಾಗಿ ನಿರ್ಧಾರ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮಕೈಗೊಳ್ಳಬೇಕೆಂದು ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಪ್ರತಿಕ್ರಿಯೆ ಸಲ್ಲಿಸಲು ಶಿಕ್ಷಣ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಕೇಂದ್ರ ಸರ್ಕಾರ ಈ ಕುರಿತಂತೆ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ 8 ನೇ ತರಗತಿ ಪಾಸಾದ ಸಾವಿರಾರು ಮಕ್ಕಳನ್ನು ಹೊರಗೆ ಕಳುಹಿಸಲಾಗುತ್ತದೆ ಎಂದು ಸರ್ಕಾರೇತರ ಸಂಸ್ಥೆ ಸೋಶಿಯಲ್ ಜ್ಯೂರಿಸ್ಟ್ ಪರ ವಕೀಲರು ವಾದ ಮಂಡಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಪ್ರತಿಕ್ರಿಯೆ ನೀಡಲು ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ, ಮಾರ್ಚ್ 17 ಕ್ಕೆ ವಿಚಾರಣೆ ಮುಂದೂಡಿದೆ.