
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯ ವಿವರಗಳನ್ನು ಕೊಡಿ. ನಾವು ಅವರಿಗೆ ರಕ್ಷಣೆ ನೀಡುತ್ತೇವೆ ಎಂದು ದೆಹಲಿ ಪೊಲೀಸರು ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಒಂದು ನಿರ್ದಿಷ್ಟ ಪ್ರಕರಣದಲ್ಲಿ ಹುಡುಗಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಆಕೆ ಬೇಡ, ಪೊಲೀಸರಿಗೆ ಕರೆ ಮಾಡುವುದರಿಂದ ನನಗೆ ಅಪಮಾನವಾಗುತ್ತದೆ ಎಂದು ಹೇಳಿರುವುದಾಗಿ ರಾಹುಲ್ ಗಾಂಧಿ ಭಾಷಣದ ವೇಳೆ ಪ್ರಸ್ತಾಪಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಅವರ ಹೇಳಿಕೆ ವೈರಲ್ ಆಗಿದ್ದು, ದೆಹಲಿ ಪೋಲೀಸರು ಇದನ್ನು ಗಮನಿಸಿ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮಹಿಳೆಯ ವಿವರ ನೀಡಿದರೆ ಭದ್ರತೆ ಒದಗಿಸುತ್ತೇವೆ ಎಂದು ಹೇಳಿದ್ದಾರೆ.