ಬೆಂಗಳೂರು: ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಫೆಬ್ರವರಿ 7 ರಂದು ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಮತ್ತು ಇಲಾಖೆ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ನೇರ ನೇಮಕಾತಿ ಮಾಡಿಕೊಳ್ಳಬೇಕು. ಅನುದಾನಿತ ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ, ಹೊರಗುತ್ತಿಗೆ, ಅರೆಕಾಲಿಕ ನೌಕರರಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಹಳೆ ಪಿಂಚಣಿ ಯೋಜನೆ ಪುನರ್ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.
ಕೋವಿಡ್ ವೇಳೆ ತಡೆಹಿಡಿದ 18 ತಿಂಗಳ ತುಟ್ಟಿ ಭತ್ಯೆ ಕೂಡಲೇ ಬಿಡುಗಡೆ ಮಾಡಬೇಕು. ಇಲಾಖೆಗಳ ವಿಲೀನ, ನೌಕರರ ಸಂಖ್ಯೆ ಕಡಿತ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ., ಎಸ್.ಟಿ. ಸಮನ್ವಯ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ. ಶಿವಶಂಕರ್ ಆಗ್ರಹಿಸಿದ್ದಾರೆ.