ಬೆಂಗಳೂರು: ವೇತನ ಹೆಚ್ಚಳ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳು ಮತ್ತು ಸರ್ಕಾರವನ್ನು ಎಚ್ಚರಿಸಲು ಆಗಸ್ಟ್ 27ರಂದು ಕಲಬುರಗಿ, ಆಗಸ್ಟ್ 28ರಂದು ಹುಬ್ಬಳ್ಳಿಯಲ್ಲಿ ನೌಕರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸೆಪ್ಟಂಬರ್ 12ರಂದು ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧಾರ ಕೈಗೊಂಡಿದೆ.
ಸಾರಿಗೆ ನೌಕರರ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿಸುವ ಸಂಬಂಧ ಕ್ರಮ ಕೈಗೊಳ್ಳಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಿಸಬೇಕು. ಕಾಲ ಕಾಲಕ್ಕೆ ಪ್ರಯಾಣ ದರ ಹೆಚ್ಚಳಕ್ಕೆ ತಜ್ಞರ ಸಮಿತಿ ರಚಿಸಬೇಕು ಎಂದು ಒತ್ತಾಯಿಸಲಾಗಿದೆ.
ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ಎಚ್ಚರಿಕೆ ನೀಡಲು ಮಂಗಳವಾರ ಜಂಟಿ ಕ್ರಿಯಾ ಸಮಿತಿಯ ಸಮ್ಮೇಳನ ನಡೆಸಲಾಗಿದೆ. ನೌಕರರ ಬೇಡಿಕೆ ಮತ್ತು ಹಿತ ಕಾಯುವಲ್ಲಿ ವಿಫಲವಾದ ಸರ್ಕಾರ ಮತ್ತು ನಿಗಮಗಳ ಆಡಳಿತ ಮಂಡಳಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕಲಬುರಗಿ, ಹುಬ್ಬಳ್ಳಿಯಲ್ಲಿ ಸಮಾವೇಶ, ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.