ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿಪಡಿಸಿದೆ.
ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿ ಬುಧವಾರ ಸುತ್ತೋಲೆ ಹೊರಡಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದ್ದಾರೆ. ಡೆಂಘೀ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಡೆಂಘೀ ಪಾಸಿಟಿವ್ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಡೆಂಘೀ ಪ್ರಕರಣಗಳ ಪರೀಕ್ಷೆಯಲ್ಲಿ ಶೇಕಡ 42ರಷ್ಟು ಹೆಚ್ಚಳವಾಗಿದೆ. ಸಾಕಷ್ಟು ಮೊದಲೇ ಪಾಸಿಟಿವ್ ಪ್ರಕರಣಗಳನ್ನು ಪತ್ತೆ ಮಾಡಬೇಕು. ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.