ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಒಂದು ತಿಂಗಳಲ್ಲಿ 24 ಪ್ರಕರಣ ಪತ್ತೆಯಾಗಿದೆ. ಜುಲೈ ಮೊದಲವಾರದವರೆಗೆ 72 ಡೆಂಗ್ಯೂ ಪ್ರಕರಣ ದಾಖಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಳೆದ 15 ದಿನಗಳಿಂದ ವಾತಾವರಣವೇ ಬದಲಾಗಿದೆ. ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳೂ ಏರಿಕೆಯಾಗುತ್ತಿವೆ. ಜಿಲ್ಲೆಯ ಗ್ರಾಮೀಣ ಭಾಗಗಳಿಗಿಂತ ಮಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಿದೆ. ಮಂಗಳೂರಿನಲ್ಲಿಯೇ 51 ಡೆಂಗ್ಯೂ ಪ್ರಕರಣ ವರದಿಯಾಗಿದೆ.
ಮಳೆಯ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮುಂಜಾಗೃತೆವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.