ಉಡುಪಿ: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಕಾಲರಾ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ 36 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಪತ್ತೆಯಾಗಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಿನ ನಿರ್ಮಾಣ ಸಂಸ್ಥೆಯಲ್ಲಿ ಲಾರಿ ಚಾಲಕರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ಜ್ವರ ಕಾಣಿಸಿಕೊಂಡಿತ್ತು. ಸೋಮವಾರ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ತ ಮಾದರಿ ಪರೀಕ್ಷೆ ನಡೆಸಿದಾಗ ಬುಧವಾರ ಕಾಲರಾ ಇರುವುದು ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ. ಗಡಾದ್ ತಿಳಿಸಿದ್ದಾರೆ.
ಅವರು ಲಾರಿ ಚಾಲಕರಾಗಿರುವುದರಿಂದ ಎಲ್ಲಿಂದ ರೋಗ ಬಂದಿದೆ ಎನ್ನುವುದು ಖಚಿತವಾಗಿಲ್ಲ. ಈದು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಯಾರಲ್ಲಿಯೂ ರೋಗಲಕ್ಷಣ ಕಂಡು ಬಂದಿಲ್ಲ. ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.