ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನ ಪಡೆಯುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.5 ಲಕ್ಷ ರೂ. ಮೀರಿರಬಾರದು. ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(ಎಸ್‍ಎಸ್‍ಪಿ) ವಿದ್ಯಾರ್ಥಿಗಳ ಲಾಗಿನ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಫೆ.29 ರೊಳಗೆ ಪ್ರಮಾಣ ಪತ್ರವನ್ನು ಅಪ್‍ಲೋಡ್ ಮಾಡಬೇಕು.
2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ(ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.