ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಧ್ಯಮ ಪ್ರಕಟಣೆ ನೀಡಿದ್ದಾರೆ.
ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಆಣತಿಯಂತೆ ನನ್ನ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರ ರಹಿತವಾಗಿವೆ. ದೇವರಾಜ ಗೌಡರ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.
ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಮತ್ತು ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ. ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಎಂದು ಹೇಳಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.
ದೇವರಾಜೇಗೌಡ ಮಾಡುವುದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಬೆಂಗಳೂರಿನಿಂದ ಹೊರಗಿದ್ದು ಬಂದ ನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.