ಬೆಂಗಳೂರು: ಮುಜರಾಯಿ ಇಲಾಖೆ ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಅನುದಾನ ಖರ್ಚು ಮಾಡಲು ಸಾಮಾನ್ಯ ಸಂಗ್ರಹಣಾ ನಿಧಿ ಮೊತ್ತ ಹೆಚ್ಚಳ ಮಾಡಲು ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ.
ಬೆಂಗಳೂರಿನ ಚಾಮರಾಜಪೇಟೆಯ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಾಯ್ದೆಗೆ ರಾಜ್ಯಪಾಲರ ಅನುಮೋದನೆ ಸಿಗಬೇಕಿದೆ. ಅನುಮೋದನೆಯಾದ ನಂತರ ಹೆಚ್ಚಾಗಿ ಸಂಗ್ರಹವಾಗುವ ನಿಧಿಯಲ್ಲಿ ಪ್ರತಿ ವರ್ಷ ನೂರು ದೇವಾಲಯಗಳಂತೆ ಸಿ ವರ್ಗದ ದೇವಾಲಯಗಳ ಜೀರ್ಣೋದ್ಧಾರ, ವಿದ್ಯಾರ್ಥಿ ವೇತನ, ಮರಣ ಉಪದಾನ, ಅರ್ಚಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ದೇವಾಲಯಗಳ ಅಭಿವೃದ್ಧಿಗೆ, ಅರ್ಚಕರ ಕ್ಷೇಮಾಭಿವೃದ್ಧಿಗೆ ನಿಧಿ ವಿನಿಯೋಗ ಮಾಡಲು ಸರ್ಕಾರ ತೀರ್ಮಾನಿಸಿದೆ. ಅರ್ಚಕರ ವಿವಿಧ ಬೇಡಿಕೆಗಳನ್ನು ಸರ್ಕಾರದ ಹಂತದಲ್ಲಿ ಚರ್ಚಿಸಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.