ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆ ನಡೆದಿದ್ದು, ಎನ್.ಡಿ.ಎ. ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಪರಾಭವಗೊಳಿಸಿದ್ದಾರೆ. ದ್ರೌಪದಿ ಮುರ್ಮ ರಾಷ್ಟ್ರದ ನೂತನ ರಾಷ್ಟ್ರಪತಿಯಾಗಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದಕ್ಕೂ ಮುನ್ನ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಔತಣಕೂಟ ಏರ್ಪಡಿಸಲಾಗಿದ್ದು, ಈ ವೇಳೆ ರಾಮನಾಥ್ ಕೋವಿಂದ್ ಅವರು ನಮಸ್ಕರಿಸಿದರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿ ನಮಸ್ಕರಿಸದೆ ನಿರ್ಲಕ್ಷಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು.
ಆದರೆ ವಾಸ್ತವ ಸಂಗತಿ ಬೇರೆಯೇ ಇದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಣ್ಯರಿಗೆ ನಮಸ್ಕರಿಸುತ್ತಾ ಬಂದ ವೇಳೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ ಅವರಿಗೆ ಪ್ರತಿ ನಮಸ್ಕಾರ ಮಾಡಿದ್ದಾರೆ. ಬಳಿಕ ಅವರು ಮಾಧ್ಯಮಗಳ ಕ್ಯಾಮರಾದತ್ತ ಮುಖ ಮಾಡಿದ್ದು ಈ ಒಂದು ಸಣ್ಣ ವಿಡಿಯೋ ಕ್ಲಿಪ್ ಇಟ್ಟುಕೊಂಡು, ನರೇಂದ್ರ ಮೋದಿಯವರು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ.