ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11ನೇ ಸೀಸನ್ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿದೆ.
ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದ್ದು, 2 ದೂರು ದಾಖಲಾಗಿದೆ. ವಕೀಲೆ ರಕ್ಷಿತಾ ಸಿಂಗ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದೂರು ನೀಡಿದ್ದರೆ, ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಬಿಗ್ ಬಾಸ್ ಶೋ ನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗಿದೆ. ಬಿಗ್ ಬಾಸ್ 11 ಸೀಸನ್ ನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಕಿರುಕುಳ ನೀಡುತ್ತಿರುವುದರಿಂದ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಸ್ವರ್ಗ ಮತ್ತು ನರಕ ವಿಚಾರದಲ್ಲಿ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಕ್ಯಾಮೆರಾದಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ. ಕೇವಲ ಗಂಜಿಯನ್ನು ಮಾತ್ರ ನೀಡಲಾಗಿದೆ. ಮಲಗಲು, ಹಾಗೂ ಪ್ರತ್ಯೇಕ ಶೌಚಾಲಯದ ವ್ಯವಸ್ಥೆಯಿಲ್ಲ ಎಂಬ ದೂರು ಕೇಳಿಬರುತ್ತಿದೆ.