ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀ ರಾಮನ ಅವಹೇಳನ ಮಾಡಿದ್ದಾರೆ ಎನ್ನಲಾದ ಪ್ರಕರಣ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿ ನೇಮಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲಾ ಹೆಚ್ಚುವರಿ ಆಯುಕ್ತ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಶೀಘ್ರವೇ ವರದಿ ಸಲ್ಲಿಸುವಂತೆ ಶುಕ್ರವಾರ ಸರ್ಕಾರ ಆದೇಶ ಪತ್ರ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಶಿಕ್ಷಕಿ ಪಾಠ ಮಾಡುವಾಗ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಮಕ್ಕಳು ಮತ್ತು ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಶಾಸಕರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸುತ್ತಿದ್ದು, ತಪ್ಪೆಸಗಿದ್ದು ದೃಢಪಟ್ಟಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆ ತನಿಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.