ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಸಾಧಕ, ಬಾಧಕಗಳ ಪರಿಶೀಲನೆ ನಂತರ ಹೊರಗುತ್ತಿಗೆಯ ಎಲ್ಲಾ ಗ್ರೂಪ್ ಡಿ ಸಿಬ್ಬಂದಿಗಳನ್ನು ನೇರಪಾವತಿಯಡಿ ಪಡೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅವರು ಬುಧವಾರ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಮಾಡಿರುವ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು.
ದಾವಣಗೆರೆಯಲ್ಲಿನ ಚಿಗಟೇರಿ ಆಸ್ಪತ್ರೆ ವಿಶಾಲವಾದ ಸ್ಥಳದಲ್ಲಿದ್ದು, 70 ವರ್ಷದ ಹಳೆಯದಾಗಿದೆ. ಇಲ್ಲಿ ಹೊಸ ಕಟ್ಟಡ, ದುರಸ್ಥಿಯಾಗಬೇಕಾಗಿದ್ದು, ಮಧ್ಯ ಕರ್ನಾಟಕದಲ್ಲಿನ ಈ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವ ಮೂಲಕ ಈ ಭಾಗದಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಇಲ್ಲಿನ ಮೂಲಭೂತ ಸೌಕರ್ಯಕ್ಕೆ ಮತ್ತು ಹೊಸ ಬ್ಲಾಕ್ ನಿರ್ಮಾಣಕ್ಕೆ 17 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು ಭವಿಷ್ಯದ ದೃಷ್ಟಿಯಿಂದ ನೂತನ ಯೋಜನೆಯನ್ನು ಸಿದ್ದಪಡಿಸಿ ಅದರಂತೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು.
30 ಕೋಟಿ ರೂ.ನಲ್ಲಿ ನಿರ್ಮಿಸಲಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 200 ಹಾಸಿಗೆ ಸಾಮರ್ಥ್ಯವಿದ್ದು, ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ಮಂಜೂರು ಮಾಡಲು ಸರ್ಕಾರದ ಮುಂದೆ ಪ್ರಸ್ತಾವನೆ ಇದೆ. ಇಲ್ಲಿಗೆ ಬೇಕಾಗಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳಿಗೆ ಮಂಜೂರಾತಿಯನ್ನು ನೀಡಲಾಗುತ್ತದೆ. ಟ್ರಾಮಾ ಕೇರ್ ಸೆಂಟರ್ ಗೂ ಸಿಬ್ಬಂದಿಗಳ ಅಗತ್ಯವಿದ್ದು, ಪರಿಶೀಲಿಸಿ ಮಂಜೂರಾತಿ ನೀಡಲಾಗುತ್ತದೆ. ಆಸ್ಪತ್ರೆ ಕಟ್ಟಿದರೆ ಸಾಲದು, ಇಲ್ಲಿ ಅಗತ್ಯವಿರುವ ಪರಿಕರ, ಸಿಬ್ಬಂದಿಗಳು ಇದ್ದಾಗ ಮಾತ್ರ ಜನರಿಗೆ ಆರೋಗ್ಯ ಸೇವೆ ಸಿಗಲು ಸಾಧ್ಯವಿದೆ ಎಂದರು.
ಶಾಸಕ ಡಾ; ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೇಯರ್ ಕೆ.ಚಮನ್‍ಸಾಬ್, ದೂಡಾ ಆಧ್ಯಕ್ಷ ಕೆ.ದಿನೇಶ್ ಶೆಟ್ಟಿ, ಉಪ ಮೇಯರ್ ಸೋಗಿ ಶಾಂತಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಶಿವಕುಮಾರ್ ಕೆ.ಬಿ, ಅಭಿಯಾನ ನಿರ್ದೇಶಕ ಡಾ; ನವೀನ್ ಭಟ್ ರೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.