ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ 7 ಮಂದಿ ಸಚಿವರು ಹಾಗೂ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸದಲ್ಲಿ ಇರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು 35 ಶಾಸಕರು, 7 ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಡಿನ್ನರ್ ಮೀಟಿಂಗ್ ನಲ್ಲಿ ಸಿದ್ದರಾಮಯ್ಯ ಅವರು ಕೂಡ ಭಾಗಿಯಾಗಿರುವುದು ಮಹತ್ವ ಪಡೆದುಕೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ವರ್ಷಾಚರಣೆಗಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದು, ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಹಾಗೂ ಸಚಿವರು, ಶಾಸಕರ ಸಭೆ ನಡೆದಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭೋಜನಕೂಟ ಇದು ಎಂದು ಹೇಳಲಾಗಿದ್ದರೂ ಡಿಸಿಎಂ ಡಿಕೆ ಅನುಪಸ್ಥಿತಿಯಲ್ಲಿ ನಡೆದ ಡಿನ್ನರ್ ಮೀಟಿಂಗ್ ಭಾರಿ ಕುತೂಹಲ ಮೂಡಿಸಿದೆ.