ದೀಪಾವಳಿ ಹಬ್ಬಕ್ಕೂ ಮುನ್ನ ಉದ್ಯೋಗ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ದೇಶದ ವಿವಿಧ ರಾಜ್ಯಗಳಲ್ಲಿನ 75,000 ಮಂದಿಗೆ ಸರ್ಕಾರಿ ನೌಕರಿ ಸಿಗಲಿದ್ದು, ಅಕ್ಟೋಬರ್ 22ರಂದು ಪ್ರಧಾನಿ ನರೇಂದ್ರ ಮೋದಿಯವರೇ ನೇಮಕಾತಿ ಪತ್ರ ನೀಡಲಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ವರ್ಚುಯಲ್ ಸಭೆ ನಡೆಯಲಿದ್ದು, ಕೇಂದ್ರ ಸಚಿವರು ಕೂಡ ಈ ಸಂದರ್ಭದಲ್ಲಿ ನೇಮಕಾತಿಗೊಂಡ ಅಭ್ಯರ್ಥಿಗಳ ಜೊತೆಗಿರಲಿದ್ದಾರೆ. ಉದ್ಯೋಗಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಆಯಾ ರಾಜ್ಯಗಳಿಂದಲೇ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡು ನೇಮಕಾತಿ ಪತ್ರ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ 10 ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದು, ಹೀಗಾಗಿ ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಪಟ್ಟಿ ಮಾಡಲು ಸೂಚಿಸಿದ್ದರು. ಇದರನ್ವಯ ಈಗ 75,000 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಸರ್ಕಾರದ ಗೃಹ, ರಕ್ಷಣೆ, ರೈಲ್ವೆ ಕಾರ್ಮಿಕ ಇಲಾಖೆ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಈ ಉದ್ಯೋಗಗಳು ಲಭ್ಯವಾಗುತ್ತಿದ್ದು, ಉದ್ಯೋಗ ಪಡೆದ ಅಭ್ಯರ್ಥಿಗಳೊಂದಿಗೆ ವಿವಿಧ ರಾಜ್ಯಗಳಿಂದ ಕೇಂದ್ರ ಸಚಿವರುಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.