ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಯಲಿದ್ದು, ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಿನ ಅಧಿವೇಶನ ನಡೆಯಲಿದ್ದು, ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ನಂತರ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮತ್ತು ಸಚಿವರಿಗೆ ಖಾತೆ ಹಂಚಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನಸಭೆ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಆಗೇ ಆಗುತ್ತದೆ. ಕಾನೂನು ಪ್ರಕಾರ ಮೇ 24ರ ಒಳಗೆ ಹಳೆಯ ಸರ್ಕಾರ ವಿಸರ್ಜನೆಯಾಗಬೇಕಿದ್ದು, ರಾಜ್ಯಪಾಲರು ಮೇ 25 ರಂದು ರಾಜ್ಯದಲ್ಲಿ ಇರುವುದಿಲ್ಲವೆಂದು ತಿಳಿಸಿದ್ದಾರೆ. ಹೀಗಾಗಿ ಮೇ 22 ರಿಂದ 3 ದಿನ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಅಧಿವೇಶನ ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.