ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ವಿಜಯ್ ಮುಳಗುಂದ ಅವರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.
ಆಗಸ್ಟ್ 30ರಂದು ದಾಖಲೆಗಳೊಂದಿಗೆ ಬೆಂಗಳೂರಿನ ಸಿಬಿಐ ಕಚೇರಿಗೆ ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ಡಿ.ಕೆ. ಶಿವಕುಮಾರ್ ನಿವಾಸ ಸೇರಿ 14 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿ.ಕೆ.ಶಿ ಆಪ್ತ ಮುಳಗುಂದ ಅವರ ಮನೆ ಮೇಲೂ ದಾಳಿ ನಡೆಸಲಾಗಿತ್ತು.
ಡಿ.ಕೆ. ಶಿವಕುಮಾರ್, ಮುಳಗುಂದ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿರುವ ಆರೋಪ ಕೇಳಿ ಬಂದಿದೆ. ಇದೀಗ ಮುಳಗುಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿರುವ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರಿಗೂ ಸಿಬಿಐ ಮತ್ತೆ ಸಮಸ್ಯೆ ತರುವ ಆತಂಕ ಎದುರಾಗಿದೆ.