ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೂತನ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಗೆ ರವಾನಿಸಲಾಗಿದೆ.
ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ ಎಐಸಿಸಿ ವೀಕ್ಷಕರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಗೆ ಶಾಸಕರ ಅಭಿಪ್ರಾಯ ಒಪ್ಪಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಸಿಎಂ ಆಯ್ಕೆ ಬಗ್ಗೆ ಅಂತಿಮ ಚರ್ಚೆ ನಡೆಯುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಶುಕ್ರವಾರ ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ರಾಜೀನಾಮೆ ಕೊಟ್ಟಿದ್ದಾರಾ ಇಲ್ವಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸ ಬಳಿ ಮಾತನಾಡಿದ ಅವರು, ಸಿಎಂ ಆಯ್ಕೆ ಕುರಿತು ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಹೈಕಮಾಂಡ್ ನಿಂದ ಯಾವುದೇ ಕರೆ ಬಂದಿಲ್ಲ. ಶುಭ ವಾರ, ಶುಭ ಗಳಿಗೆ, ಶುಭ ಮಹೂರ್ತ ನೋಡಬೇಕು ಎಂದು ಹೇಳಿದ್ದಾರೆ. ಈ ಮೂಲಕ ಸರ್ಕಾರ ರಚನೆ ಬಗ್ಗೆ ಸುಳಿವು ನೀಡಿದ್ದಾರೆ.
ಶಾಸಕರ ಪ್ರತ್ಯೇಕ ಅಭಿಪ್ರಾಯ ಸಂಗ್ರಹ ಮುಕ್ತಾಯವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದಷ್ಟು ಬೇಗನೆ ಮುಖ್ಯಮಂತ್ರಿ ಯಾರೆಂದು ತೀರ್ಮಾನಿಸುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದು, ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಪಾಸ್ ಮಾಡಿದ್ದೇವೆ. ಮತ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.