ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯಾಗಿದ್ದು, ತಲಾ ಎರಡೂವರೆ ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಲಾಗಿತ್ತು. ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 30 ತಿಂಗಳು ಆಡಳಿತ ನಡೆಸಿದ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಲೋಕಸಭೆ ಚುನಾವಣೆ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು.
ಆದರೆ, ನೂತನ ಸಚಿವ ಎಂ.ಬಿ. ಪಾಟೀಲ್ ನೀಡಿರುವ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ. ಅಧಿಕಾರ ಹಂಚಿಕೆ ಕುರಿತಾಗಿ ಯಾವುದೇ ಮಾತುಕತೆ ನಡೆದಿಲ್ಲ. 5 ವರ್ಷ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ಲೋಕಸಭೆ ಚುನಾವಣೆಯ ನಂತರ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಹೇಳಿರುವುದಾಗಿ ಎಂ.ಬಿ. ಪಾಟೀಲ್ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ತಿಳಿಸಿದ್ದಾರೆ. ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ.