ಕಾಂಗ್ರೆಸ್ ಹೈಕಮಾಂಡ್ ರಾಜಿಸಂಧಾನ ಸೂತ್ರ ಸಿದ್ಧಪಡಿಸಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಮತ್ತು ನಂತರದ 30 ತಿಂಗಳು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ.
ಮೇ 20ರಂದು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಆಡಳಿತದ ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ನಾಯಕರಿಗೆ ಆಹ್ವಾನ ನೀಡಲಾಗುವುದು.
ಒಂದು ವಾರದ ನಂತರ ಸಚಿವರ ಪ್ರಮಾಣವಚನ ನಡೆಯಲಿದೆ. ಉಪಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಎರಡು ಪ್ರಮುಖ ಖಾತೆಗಳನ್ನು ನೀಡಲಾಗುವುದು.
ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಗೆ ಕಾಂಗ್ರೆಸ್ ಚಿಂತನೆ ನಡೆಸಿದ್ದು, ಆದರೆ, ಡಿ.ಕೆ. ಶಿವಕುಮಾರ್ ಒಪ್ಪದ ಹಿನ್ನೆಲೆಯಲ್ಲಿ ಅವರೊಬ್ಬರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಮೂರು ಡಿಸಿಎಂ ಹುದ್ದೆ ಬೇಡ ಎಂದು ಡಿಕೆಶಿ ಹೇಳಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾತ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.