ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯದ್ದೇ ಅಬ್ಬರ ಜಾಸ್ತಿಯಾಗಿದೆ. ಎಲ್ಲೋ ನಡೆದಿರುವ ಘಟನೆಗಳ ವಿಡಿಯೋವನ್ನು ತಿರುಚಿ ಇಲ್ಲಿಯೇ ನಡೆದಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ವಿಡಿಯೋಗಳ ಪೂರ್ವಾಪರ ಅರಿಯದೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವವರು ಇನ್ನು ಮುಂದೆ ಬಲು ಎಚ್ಚರಿಕೆಯಿಂದ ಇರಬೇಕಾಗುತ್ತದೆ.
ಹೌದು, ಪೊಲೀಸರು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮೊದಲಾದವುಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಸುಳ್ಳು ಮಾಹಿತಿಯನ್ನು ಒಳಗೊಂಡಿರುವ ವಿಡಿಯೋ ಹಾಗೂ ಸುದ್ದಿಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸರು ಈ ಕುರಿತಂತೆ ಈಗಾಗಲೇ ಪ್ರಕಟಣೆ ಹೊರಡಿಸಿದ್ದಾರೆ.
ಯಾವುದೇ ಪ್ರಚೋದನಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವೇಳೆ ಅಂತಹ ವ್ಯಕ್ತಿಗಳು ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಕ್ತ ಸ್ಪಷ್ಟನೆ ನೀಡಬೇಕಾಗುತ್ತದೆ. ನೈಜ ಸುದ್ದಿಗಳನ್ನು ತಿರುಚಿ ಶೇರ್ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಂತಹ ವ್ಯಕ್ತಿ ಅಥವಾ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.