ವಾಷಿಂಗ್ಟನ್: ಅಮೆರಿಕದ ಸಂಸತ್ ಮೇಲೆ ಕಂಡು ಕೇಳರಿಯದ ದಾಳಿ ನಡೆಸಲಾಗಿದೆ. ಅಪಾರ ಸಂಖ್ಯೆಯಲ್ಲಿದ್ದ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ನಡೆದ ಘಟನೆ ಹಿಂಸಾಚಾರಕ್ಕೆ ತಿರುಗಿ ಮೂವರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಅವರನ್ನು ಆಯ್ಕೆ ಮಾಡಲಾಗಿದ್ದು, ಜನವರಿ 20 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಚುನಾವಣೆಯಲ್ಲಿ ಪರಾಭವಗೊಂಡಿದ್ದರೂ, ತಮ್ಮ ಸೋಲನ್ನು ಒಪ್ಪಿಕೊಳ್ಳದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಬೆಂಬಲಿಗರಿಗೆ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಕೊನೆಗೂ ಸೋಲೊಪ್ಪಿಕೊಂಡ ಡೊನಾಲ್ಡ್ ಟ್ರಂಪ್ ಅಧಿಕಾರ ಹಸ್ತಾಂತರಕ್ಕೆ ಸಮ್ಮತಿಸಿದ್ದಾರೆ.
ಅಮೆರಿಕದ ಕ್ಯಾಪಿಟಲ್ ನಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಂಪ್ ಅವರ ವಿರುದ್ಧ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ರಂಪ್ ಪ್ರಜಾಪ್ರಭುತ್ವದ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಘಟನೆ ಕಪ್ಪು ಚುಕ್ಕೆಯಾಗಿದೆ. ಅಮೆರಿಕದ ಇತಿಹಾಸದಲ್ಲಿ ಇದೊಂದು ಕರಾಳ ದಿನವಾಗಿದೆ ಎಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಇದರ ನಡುವೆಯೇ ಫೇಸ್ಬುಕ್, ಇನ್ಸ್ಟಾಗ್ರಾಮ್ ನಿಂದ ಡೊನಾಲ್ಡ್ ಟ್ರಂಪ್ ಗೆ ನಿಷೇಧ ಹೇರಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಈ ಜಾಲತಾಣಗಳಿಂದ ಅನಿರ್ದಿಷ್ಟಾವಧಿ ನಿಷೇಧ ಹೇರಲಾಗಿದೆ.