ಬೆಂಗಳೂರು : ಮೈಸೂರು ಚಲೋ ಪಾದಯಾತ್ರೆಗೆ ಇಂದು ‘ದೋಸ್ತಿ’ ರಣಕಹಳೆ ಮೊಳಗಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಂದು ಜಂಟಿಯಾಗಿ ಪಾದಯಾತ್ರೆಗೆ ಅಧಿಕೃತ ಚಾಲನೆ ನೀಡಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ‘ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇದು ಕೊನೆ ಅವಕಾಶ. ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರಾಜೀನಾಮೆ ಅವರಾಗಿಯೇ ಕೊಟ್ಟರೆ ಅವರಿಗೆ ಅದು ಶೋಭೆ ತರುತ್ತದೆ,. ಇಲ್ಲದಿದ್ದರೆ ಅನಿವಾರ್ಯವಾಗಿ ರಾಜ್ಯಪಾಲರೇ ಕ್ರಮ ತೆಗೆದುಕೊಳ್ಳಬಹುದು ಎಂದರು.