ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜಯದೇವ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಾ.ಮಂಜುನಾಥ್ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಡಿ.ಕೆ.ಸುರೇಶ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ಬಿಜೆಪಿ ನಾಯಕರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಿವಾಸದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಭೆಯಲ್ಲಿ ಮಂಜುನಾಥ್ ಮನವೊಲಿಕೆ ಯತ್ನ ನಡೆದಿತ್ತು. ಉಭಯ ಪಕ್ಷಗಳ ನಾಯಕರು ಮಂಜುನಾಥ್ ಸ್ಪರ್ಧೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಡಾ. ಮಂಜುನಾಥ್ ಲೋಕಸಭಾ ಅಖಾಡಕ್ಕೆ ಇಳಿಯಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.