ಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಾನು ನೀಡಿದ್ದ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೊಲೆಯಾಗಿದೆ. ನೇಹಾ ಹಾಗೂ ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ನೇಹಾ ಆತನಿಂದ ದೂರಾಗಲು ನಿರ್ಧರಿಸಿದ್ದಾಳೆ. ಈ ಕಾರಣಕ್ಕೆ ಆತ ಕೊಲೆ ಮಾಡಿದ್ದಾನೆ. ಇದು ಆಕಸ್ಮಿಕ ಘಟನೆ ಎಂದು ಹೇಳಿಕೆ ನೀಡಿದ್ದರು. ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಭಟನೆಗಳು ತೀವ್ರಗೊಂಡಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತ ಗೃಹ ಸಚಿವರು ಕ್ಷಮೆಯಾಚಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನನ್ನ ಮಾತುಗಳಿಂದ ನೇಹಾ ತಂದೆ-ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನಾನಾಗಲಿ, ಮುಖ್ಯಮಂತ್ರಿಗಳಾಗಲಿ, ಉಪಮುಖ್ಯಮಂತ್ರಿಗಳಾಗಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು. ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗುವುದಿಲ್ಲ. ನನಗಿದ್ದ ಮಾಹಿತಿ ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದೆ. ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.