ಬೆಂಗಳೂರು: ಮುಡಾ ಹಗರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಸಜ್ಜಾಗಿದ್ದು, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವರು ಹೇಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗರಂ ಆಗಿದ್ದು, ಪಾದಯಾತ್ರೆ ತಡೆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ ಎಂದು ಗುಡುಗಿದ್ದಾರೆ.
ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆಗಲಿ, ಏನಾಗುತ್ತೇ ನೋಡೋಣ. ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಸರ್ಕಾರ ಅಷ್ಟು ದುರ್ಬಲವಾಗಿಲ್ಲ. ಪಾದಯಾತ್ರೆಗೆ ಯಾವುದೇ ಅನುಮತಿ ನೀಡಲ್ಲ. ಅವರಷ್ಟಕ್ಕೆ ಅವರು ನಡೆದು ಹೋಗುವುದಾದರೆ ನಮ್ಮ ಅಭ್ಯಂತರವಿಲ್ಲ. ಆದರೆ ಕಾನೂನುಬಾಹಿರ ಕೆಲಸ ಮಡಿದರೆ, ಜನರಿಗೆ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಪಾದಯಾತ್ರೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದರು.