ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ವರದಿ ಮಂಡ್ಯ ಶಾಸಕರಿಗೆ ಹೋಗುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕಿಡಿಕಾರಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಮ್ಮನೇ ಆರೋಪ ಮಾಡುವುದು ಸುಲಭ, ಯಾರು ಮಾಹಿತಿ ಕೊಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಹಲವು ವಿಚಾರಗಳನ್ನು ಸಾರ್ವಜನಿಕಗೊಳಿಸುವಂತಿಲ್ಲ. ಮಂಡ್ಯ ಶಾಸಕರಿಗೆ ಯಾರು ಮಾಹಿತಿ ನೀಡುತ್ತಾರೆ? ಆರೋಪ ಮಾಡುವುದು ಸುಲಭ. ನಾವು ಯಾವ ಮುಲಾಜಿಗೆ ಒಳಪಡಲ್ಲ. ಎಸ್ಐಟಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇನ್ನು ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆತರುವ ಕೆಲಸ ನಡೆಯುತ್ತಿದೆ. ಆತನನ್ನು ಕರೆತಂದು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.