ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾವು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ನಾವು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದರು.
ಕಾನೂನು ಮೂಲಕವೇ ನಾವೂ ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಕೂಡ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಾರೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಹೋರಾಟ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಕೂಡ ರಾಜ್ಯಪಾಲರಿಗೆ ವಿವರಣೆ ನಿಡುದಾಗ್ಯೂ ಕೂಡ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದರೆ ಮೇಲಿಂದ ರಾಜ್ಯಪಾಲರಿಗೆ ಒತ್ತಡವಿತ್ತು ಎಂಬುದು ಸ್ಪಷ್ಟ. ರಾಜ್ಯಪಾಲರ ಕಚೇರಿ ದುರ್ಬಳಕೆಯಾಗಿದೆ. ರಾಜಕೀಯ ದುರುದ್ದೇಶದಿಂದ ಸಿಎಂ ವಿರುದ್ಧ ಆರೋಪ ಮಾಡಲಾಗುತ್ತಿದೆ. ಈ ನಿಟ್ಟಿಲ್ಲಿಯೂ ಹೋರಾಟ ನಡೆಸುವುದಾಗಿ ತಿಳಿಸಿದರು.