ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಮುಂದುವರೆಯುವುದು ಬಿಡುವುದು ಹೈಕಮಾಂಡ್ ನಿರ್ಧಾರ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ನಿರ್ಧಾರ. ಲೋಕಸಭಾ ಚುನಾವಣೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ನಾವು ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ. ಸಿಎಂ ಮುಂದುವರೆಸುವುದು ಬಿಡುವುದು ಹೈಕಮಾಂಡ್ ತೀರ್ಮಾನ ಹೊರತು ನಾವಲ್ಲ. 28 ಕ್ಷೇತ್ರಗಳಿಗೆ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅದರಂತೆ ಕೆಲಸ ಮಾಡುತ್ತೇವೆ ಎಂದರು.