ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಸಮಾಧಾನಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್. ರವೀಂದ್ರ ರಾಜೀನಾಮೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆದು ಜನರ ಸಮಸ್ಯೆಗಳ ಪರ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಹಣಕ್ಕೆ ಮಣೆ ಹಾಕಿರುವ ವರಿಷ್ಠರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಕೂಡ ಪಡೆಯದ ವ್ಯಕ್ತಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಟಿಕೆಟ್ ನೀಡುವ ಬಗ್ಗೆ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸದೇ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡು ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ. ಇದನ್ನು ಖಂಡಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆಗ ಯಾರೊಂದಿಗೂ ಚರ್ಚೆ ನಡೆಸದೆ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ನಿರ್ಧರಿಸಲಾಯಿತು. ಪಕ್ಷದ ಹಿತ ದೃಷ್ಟಿಯಿಂದ ದರ್ಶನ್ ಅವರ ಗೆಲುವಿಗೆ ಶ್ರಮಿಸಿದ್ದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಬೇಕು ಎಂದು ಹೇಳಿದ್ದಾರೆ.